ಉತ್ತರ ಕನ್ನಡದ 3 ಯೋಜನೆ ಸ್ಥಗಿತಕ್ಕೆ ಮನವಿ

Contributed byKeerthi Prasad|Vijaya Karnataka
Subscribe

ಉತ್ತರ ಕನ್ನಡ ಜಿಲ್ಲೆಯ ಮೂರು ಪ್ರಮುಖ ಯೋಜನೆಗಳಾದ ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ತಿರುವು ಮತ್ತು ಶರಾವತಿ ಭೂಗತ ಜಲವಿದ್ಯುತ್ ಯೋಜನೆಗಳನ್ನು ಕೂಡಲೇ ಕೈಬಿಡುವಂತೆ ಜಿಲ್ಲೆಯ ಪ್ರಮುಖರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಯೋಜನೆಗಳಿಂದ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

appeal to suspend projects in uttar kannada intense opposition
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಬೇಡ್ತಿ-ವರದಾ ನದಿ ತಿರುವು, ಅಘನಾಶಿನಿ-ವೇದಾವತಿ ನದಿ ತಿರುವು ಮತ್ತು ಶರಾವತಿ ಭೂಗತ ಜಲವಿದ್ಯುತ್ ಯೋಜನೆಗಳಿಗೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗಳನ್ನು ಕೂಡಲೇ ಕೈಬಿಡಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ಜಿಲ್ಲೆಯ ಪ್ರಮುಖರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಈ ಯೋಜನೆಗಳಿಂದ ಜಿಲ್ಲೆಯ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ ಮತ್ತು ಆಸ್ತಿ ನಷ್ಟ ಸಂಭವಿಸಲಿದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ವಿವರಿಸಿದೆ.

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗದಲ್ಲಿ ಮಾಜಿ ಸಚಿವ ಶಿವರಾಮ ಹೆಬ್ಬಾರ್, ಶಾಸಕರಾದ ಭೀಮಣ್ಣ ನಾಯ್‌್ಕ, ಶಾಂತಾರಾಮ ಸಿದ್ದಿ, ಮತ್ತು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಇದ್ದರು. ಈ ಸಂದರ್ಭದಲ್ಲಿ, ಯೋಜನೆಗಳಿಂದಾಗುವ ತೊಂದರೆಗಳು, ಜನರ ಆತಂಕ ಮತ್ತು ಆಕ್ಷೇಪಗಳ ಬಗ್ಗೆ ನಿಯೋಗವು ಮುಖ್ಯಮಂತ್ರಿಗಳಿಗೆ ವಿವರವಾಗಿ ತಿಳಿಸಿತು.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, "ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಈ ಮೂರು ಯೋಜನೆಗಳಿಂದ ಜನರಿಗೆ ಬಹಳಷ್ಟು ತೊಂದರೆಯಾಗಲಿದೆ. ಆದ್ದರಿಂದ, ಜನರಿಂದ ತೀವ್ರ ವಿರೋಧವಿದೆ. ನದಿ ತಿರುವು ಯೋಜನೆಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಈ ಯೋಜನೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದೇವೆ" ಎಂದು ಹೇಳಿದರು.

"ಈಗಾಗಲೇ ಜಿಲ್ಲೆಯ ಜನರು ಹಲವಾರು ಯೋಜನೆಗಳಿಂದ ತಮ್ಮ ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ, ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೆ ತಂದರೆ, ಸ್ಥಳೀಯರಿಗೆ ಇನ್ನಷ್ಟು ಸಮಸ್ಯೆಗಳು ಮತ್ತು ನಷ್ಟ ಎದುರಾಗಲಿದೆ. ಈ ಯೋಜನೆಗಳನ್ನು ನಾವು ವೈಜ್ಞಾನಿಕ ನೆಲೆಯಲ್ಲಿ ವಿರೋಧಿಸುತ್ತಿದ್ದೇವೆ. ನಮ್ಮ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ" ಎಂದು ಕಾಗೇರಿ ತಿಳಿಸಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ