ಬೆಳಗಾವಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾಲಯ, 30 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಬಸವರಾಜ ತಿಮ್ಮನವರ ಶಿಕ್ಷೆಗೊಳಗಾದ ಅಪರಾಧಿ. ಈತ 2023ರ ಸೆ. 30ರಂದು ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿತ್ತು. ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು, ಆರೋಪಗಳು ಸಾಬೀತಾಗಿವೆ ಎಂದು ಅಭಿಪ್ರಾಯಪಟ್ಟು ತೀರ್ಪು ಪ್ರಕಟಿಸಿದ್ದಾರೆ. ಜತೆಗೆ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ಪಡೆಯುವಂತೆ ಸಂತ್ರಸ್ತೆಗೆ ಸೂಚಿಸಿದ್ದಾರೆ.

