ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು ಹಾಗೂ ಕರ್ನಾಟಕದ ನಾನಾ ಜ್ವಲಂತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಡಾ. ಭಾಸ್ಕರ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ಕರ್ನಾಟಕದ ಹಲವು ಜಿಲ್ಲೆಗಳಲ್ಲಿಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆಗಳಿಗೆ ನೀರಿಲ್ಲದೆ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿರಾಜ್ಯದ ಜೀವನಾಡಿಯಾಗಿರುವ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಖಂಡನೀಯ. ನೀರು ಹರಿಸುವ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾವೇರಿ ನೀರನ್ನು ಮುಂದುವರಿಸಿ ಹರಿಸಿದರೆ ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳ ರೈತರು ಹಾಗೂ ಸಾರ್ವಜನಿಕರು ಮುಂದಿನ ದಿನಗಳಲ್ಲಿತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಸರಕಾರ ದೃಢ ನಿಲುವು ಕೈಗೊಳ್ಳಬೇಕು. ಇದರೊಂದಿಗೆ ಮಹದಾಯಿ, ಕಳಸಾ-ಬಂಡೂರಿ ಹಾಗೂ ಮೇಕೆದಾಟು ಯೋಜನೆಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕು. ಕರ್ನಾಟಕದಲ್ಲಿಪರಭಾಷೆಯ ದಬ್ಬಾಳಿಕೆಗೆ ಕಡಿವಾಣ ಹಾಕಬೇಕು. ಗಡಿ ಜಿಲ್ಲೆಬೆಳಗಾವಿಯಲ್ಲಿಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್ ) ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಸರಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಬ್ಯಾಂಕ್ ಗಳಲ್ಲಿಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ರಾಜ್ಯ ಸರಕಾರದ ನಾನಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಐಸಿಎಸ್ ಇ ಮತ್ತು ಸಿಬಿಎಸ್ ಇ ಪರೀಕ್ಷೆಗಳಲ್ಲಿಕನ್ನಡ ಭಾಷೆಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ರಾಜ್ಯ ಸರಕಾರ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಎಚ್ ಎನ್ ವ್ಯಾಲಿ ನೀರಿನ ಶುದ್ಧೀಕರಣಕ್ಕೆ ಆಗ್ರಹ
ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುತ್ತಿರುವ ಎಚ್ ಎನ್ ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣಗೊಳಿಸದೆ ಹರಿಸಲಾಗುತ್ತಿದೆ. ಇದರಿಂದ ಜಿಲ್ಲೆಯ ಜನರು, ರೈತರು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಆತಂಕವಿದೆ. ಕಲುಷಿತ ನೀರಿನಿಂದ ಮುಂದಿನ ದಿನಗಳಲ್ಲಿಜಿಲ್ಲೆಯ ಜೀವಸಂಕುಲಕ್ಕೆ ಅಪಾಯ ಎದುರಾಗಬಹುದು ಎಂದು ಕನ್ನಡ ಸೇನೆ ಆತಂಕ ವ್ಯಕ್ತಪಡಿಸಿತು.
ಈ ಕುರಿತು ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಜಿಲ್ಲೆಯ ಜನರು, ರೈತರು ಹಾಗೂ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಎಚ್ ಎನ್ ವ್ಯಾಲಿ ನೀರಿಗೆ ಮೂರನೇ ಹಂತದ ಶುದ್ಧೀಕರಣ ವ್ಯವಸ್ಥೆ ಕಲ್ಪಿಸಿದ ಬಳಿಕವೇ ನೀರು ಹರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್ , ಶ್ರೀಧರ್ ಕುಮಾರ್ ಎನ್ ., ಶ್ರೀಧರ, ಭರತ್ ಎಂ., ರಾಘವೇಂದ್ರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
14 ಸಿಬಿಪಿ ಪೋಟೋ 5
ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಡಾ. ಭಾಸ್ಕರ್ ಅವರಿಗೆ ಕನ್ನಡ ಸೇನೆ ಸಂಘಟನೆ ಮನವಿ ಪತ್ರ ಸಲ್ಲಿಸಿತು.