ಮಹದಾಯಿ: ಜನರ ದಾರಿ ತಪ್ಪಿಸುತ್ತಿರುವ ಸಿಎಂ- ಶಾಸಕ ಬೆಲ್ಲದ ಆರೋಪ

Contributed byKalmesh Pattandavar|Vijaya Karnataka

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾಸಕ ಬೆಲ್ಲದ ಆರೋಪಿಸಿದ್ದಾರೆ. ಯೋಜನೆ ಅನುಷ್ಠಾನಕ್ಕೆ ರೈತರು ಹೋರಾಟ ನಡೆಸುತ್ತಿದ್ದಾರೆ. ಪರಿಸರ ಇಲಾಖೆಯಿಂದ ಅನುಮತಿ ದೊರೆತ ತಕ್ಷಣ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.

mahadayi election demands against central government and cm
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಮತ್ತು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ಅನ್ಯಾಯ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸುಳ್ಳಿನ ಮೇಲೆ ಅಧಿಕಾರಕ್ಕೆ ಬಂದಿದೆ, ಈಗಲೂ ಅದೇ ರೀತಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕಿಡಿಕಾರಿದರು. ಯೋಜನೆ ಅನುಷ್ಠಾನಕ್ಕೆ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ತಕ್ಷಣ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ಅವರು ತಿಳಿಸಿದರು.

ಮಹದಾಯಿ ನ್ಯಾಯಾಧಿಕರಣ ರಾಜ್ಯಕ್ಕೆ 3.09 ಟಿಎಂಸಿ ಕುಡಿಯುವ ನೀರು ಪೂರೈಕೆಗೆ ಆದೇಶಿಸಿತ್ತು. ಆದರೆ, ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಪರವಾನಗಿ ಪಡೆಯಬೇಕು ಎಂಬ ಷರತ್ತು ವಿಧಿಸಿತ್ತು. ಈ ನಡುವೆ ಗೋವಾ ಸರ್ಕಾರ ಯೋಜನೆಗೆ ಅನುಮತಿ ನೀಡದಂತೆ ಸುಪ್ರೀಂಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದೆ. ಈ ಹಂತದಲ್ಲಿ ಕೇಂದ್ರ ಸರ್ಕಾರ ಅಸಹಾಯಕವಾಗಿದ್ದು, ಯಾವುದೇ ರಾಜಕೀಯ ದುರುದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಗೋವಾ ಸಲ್ಲಿಸಿರುವ ತಕರಾರು ಅರ್ಜಿಗೆ ಕರ್ನಾಟಕದ ಪರ ಕಾನೂನು ಸಚಿವ ಎಚ್.ಕೆ. ಪಾಟೀಲರ ಸಂಬಂಧಿ ಮೋಹನ ಕಾತರಕಿ ವಾದ ಮಂಡಿಸುತ್ತಿದ್ದಾರೆ. ಹೀಗಾಗಿ ಎಚ್.ಕೆ. ಪಾಟೀಲರು ಸ್ವತಃ ಮುತುವರ್ಜಿ ವಹಿಸಿ ತೀರ್ಪು ಕರ್ನಾಟಕದ ಪರ ಬರುವಂತೆ ನೋಡಿಕೊಳ್ಳಬೇಕು ಎಂದು ಅರವಿಂದ ಬೆಲ್ಲದ್ ಒತ್ತಾಯಿಸಿದರು. ಹಿಂದೆ ಕೃಷ್ಣೆಯ ಕಣ್ಣೀರಿನ ಕಥೆ, ವ್ಯಥೆ ಎಂಬ ಪುಸ್ತಕ ಬರೆದಿದ್ದ ಎಚ್.ಕೆ. ಪಾಟೀಲರು ಅಧಿಕಾರಕ್ಕೆ ಬಂದ ನಂತರ ಕೃಷ್ಣೆಯ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದಾರೆ. ಅದೇ ರೀತಿ, ಮಹದಾಯಿ ವಿಚಾರವಾಗಿ ವಾರಗಟ್ಟಲೇ ಪಾದಯಾತ್ರೆ ಮಾಡಿದ್ದ ಡಿ.ಕೆ. ಶಿವಕುಮಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹೋರಾಟವನ್ನೇ ಮರೆತುಬಿಟ್ಟಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮತ್ತು ಸಚಿವ ಎಚ್.ಕೆ. ಪಾಟೀಲರು ಮಹದಾಯಿ ಕುರಿತು ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದು ಸರಿಯಲ್ಲ. ಕಾಂಗ್ರೆಸ್ ಈ ಸಂಸ್ಕೃತಿ ಕೈಬಿಟ್ಟು ಜನರಿಗೆ ಉಪಯೋಗವಾಗುವ ಹೇಳಿಕೆ ನೀಡಲಿ ಎಂದು ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮುಖಂಡರಾದ ಶಿವು ಮೆಣಸಿನಕಾಯಿ, ಮಹೇಂದ್ರ ಕೌತಾಳ, ವಸಂತ ನಾಡಜೋಶಿ, ರಾಜು ಕೋರ್ಯಾಣಮಠ ಇತರರು ಇದ್ದರು.