ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

Contributed byKeerthi Prasad|Vijaya Karnataka
bjp fully supports the struggle of job seekers
ಬೆಂಗಳೂರು: 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿರುವ ಆರೋಪಕ್ಕೆ ಪೂರಕವೆಂಬಂತೆ ಆಡಿಯೊ ಸಂಭಾಷಣೆ ಸೋರಿಕೆಯಾಗಿದ್ದು, ಹಗರಣ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆಯಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕೆಪಿಎಸ್ ಸಿಯಲ್ಲಿನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ತಮ್ಮನ್ನು ಭೇಟಿಯಾದ ಉದ್ಯೋಗಾಕಾಂಕ್ಷಿಗಳೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಮಾತನಾಡಿದ ಅವರು, ‘‘ ಉದ್ಯೋಗಾಕಾಂಕ್ಷಿಗಳು ತಮ್ಮ ಆತಂಕ, ಅಳಲನ್ನು ವ್ಯಕ್ತಪಡಿಸಿದ್ದು, ಈ ವಿಚಾರವನ್ನು ಅಧಿವೇಶನದಲ್ಲಿಪ್ರಸ್ತಾಪಿಸಲಾಗುವುದು. ಅವರ ಸಮಸ್ಯೆ ಪರಿಹಾರ, ಬೇಡಿಕೆಗಳಿಗೆ ನ್ಯಾಯ ಕೊಡಿಸಲು ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ,’’ ಎಂದು ತಿಳಿಸಿದರು.
‘‘ಉದ್ಯೋಗಾಕಾಂಕ್ಷಿಗಳು ಸದ್ಯದಲ್ಲೇ ಹೋರಾಟಕ್ಕಿಳಿಯುವುದಾಗಿ ಹೇಳಿದ್ದಾರೆ. 80 ಲಕ್ಷ ರೂ. ಲಂಚ ನೀಡಿದರೆ ಹೆಚ್ಚು ಅಂಕ ಕೊಡಿಸುವ ಆಮಿಷ ಒಡ್ಡಲಾಗಿದೆ ಎಂಬುದು ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬಂಧ ಬೆಳಗ್ಗೆ ದೂರು ನೀಡಲು ಮುಂದಾದರೂ ಸ್ವೀಕರಿಸದೆ ತಡರಾತ್ರಿ ಪ್ರಕರಣ ದಾಖಲಿಸಲಾಗಿದೆ. ಸರಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ,’’ ಎಂದು ಶಂಕೆ ವ್ಯಕ್ತಪಡಿಸಿದರು.

‘‘ಕೆಪಿಎಸ್ ಸಿ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ತೊಂದರೆಗೆ ಒಳಗಾದ ವಿದ್ಯಾರ್ಥಿಗಳ ಪರವಾಗಿ ಬಿಜೆಪಿ ನಿಲ್ಲಲಿದೆ,’’ ಎಂದರು.

----------

ರಾಜ್ಯದಲ್ಲಿಹೊಣೆ ಹೊರುವವರು ಯಾರು?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರದ ಬೆಳವಣಿಗೆ ಹಿನ್ನೆಲೆಯಲ್ಲಿರಾಜಕೀಯ ಹಾಗೂ ಆಡಳಿತಾತ್ಮಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದಲ್ಲಿಕೆಪಿಎಸ್ ಸಿ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆಯನ್ನು ಯಾರು ಹೊರುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಪ್ರಶ್ನಿಸಿದ್ದಾರೆ.

‘‘ಕೆಪಿಎಸ್ ಸಿ ವಿರುದ್ಧದ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ಯಾವಾಗ? ಇದರ ಹೊಣೆ ಯಾರು ಹೊರುತ್ತಾರೆ? ಯಾರು ರಾಜೀನಾಮೆ ಕೊಡುತ್ತಾರೆ,’’ ಎಂದು ಪ್ರಶ್ನೆ ಮಾಡಿದ್ದಾರೆ.