ಬೆಂಗಳೂರು: ದಿಲ್ಲಿಹೋರಾಟ ತಾರ್ಕಿಕ ಅಂತ್ಯ ಕಂಡ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮರುಚಾಲನೆ ಪಡೆದುಕೊಂಡಿದ್ದು, ಎಐಸಿಸಿ ಹೈಕಮಾಂಡ್ ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ (ಜು.26) ಸಂಜೆಯೇ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ತೆರಳುವ ನಿರೀಕ್ಷೆಯಿದೆ. ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ವೀಕ್ಷಕರ ಸಭೆಯಲ್ಲಿಭಾಗವಹಿಸಲು ಶುಕ್ರವಾರ ನಗರಕ್ಕೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಿಎಂ ನಡೆಸಿದ ಮಾತುಕತೆ ಫಲಪ್ರದವಾಗಿದೆ. ರಾಜ್ಯದಲ್ಲಿಬರ ಪರಿಸ್ಥಿತಿ ತೀವ್ರಗೊಂಡಿರುವ ಸಂದರ್ಭದಲ್ಲಿಪೂರ್ಣ ಪ್ರಮಾಣದ ಕ್ಯಾಬಿನೆಟ್ ಇಲ್ಲದಿದ್ದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ. ಈಗಾಗಲೇ ವಿಳಂಬವಾಗಿರುವ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಬೇಕಿದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದರ ಬೆನ್ನಲ್ಲೆ, ದಿಲ್ಲಿಗೆ ಬರುವಂತೆ ಹೈಕಮಾಂಡ್ ನಾಯಕರಿಂದ ಸೂಚನೆ ಬಂದಿರುವುದು ವಿಶೇಷವಾಗಿದೆ. ಶನಿವಾರ ಬೆಳಗ್ಗೆ ಚಿತ್ರದುರ್ಗದಲ್ಲಿಸುದ್ದಿಗಾರರ ಜತೆ ಮಾತನಾಡಿದ್ದ ಸಿಎಂ, ಈ ವಾರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದರು. ಸಂಸದರಿಗೆ ಔತಣ ನೀಡಲಿರುವ ಸಿಎಂ ಸಿಎಂ ಡಿ.ಕೆ.ಶಿವಕುಮಾರ್ ಅವರು ಭಾನುವಾರ
ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ದಿಲ್ಲಿಗೆ ತೆರಳಲಿದ್ದು, ಸಂಸತ್ ಅಧಿವೇಶನದಹಿನ್ನೆಲೆಯಲ್ಲಿಸೋಮವಾರ ರಾತ್ರಿ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಅದೇ ದಿನ ರಾತ್ರಿ ಅಥವಾ ಮಂಗಳವಾರ ಬೆಳಗ್ಗೆ ಸಚಿವ ಸಂಪುಟ ವಿಸ್ತರಣೆ
ಸಂಬಂಧ ಎಐಸಿಸಿ ನಾಯಕರೊಂದಿಗೆ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.