Belagavi And Hubli dharwad New Opportunities Growing As Top It Hubs In India
ಬೆಳಗಾವಿ, ಹು-ಧಾ ಐಟಿ ಹಬ್ ಗಳಾಗಿ ಪರಿವರ್ತನೆ
Contributed by: KENCHE GOWDA|Vijaya Karnataka•
ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಐಟಿ ಹಬ್‌ಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಲೀಪ್ ಯೋಜನೆಯಡಿ ಈ ನಗರಗಳನ್ನು ಕ್ಲಸ್ಟರ್‌ಗಳಾಗಿ ಗುರುತಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಹುಬ್ಬಳ್ಳಿ ಐಐಐಟಿಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್‌ಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಬೆಳಗಾವಿಯಲ್ಲಿ ಐಟಿ ಪಾರ್ಕ್, ಸೆಮಿ ಕಂಡಕ್ಟರ್ ಪಾರ್ಕ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ರಾಜ್ಯದ ಎರಡನೇ ರಾಜಧಾನಿ ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳನ್ನು 'ಐಟಿ ಹಬ್'ಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದರು. ಲೋಕಲ್ ಎಕನಾಮಿಕ್ ಆಕ್ಸಲರೇಟಿವ್ ಪ್ರೋಗ್ರಾಂ (ಲೀಪ್) ಅಡಿಯಲ್ಲಿ ಈ ನಗರಗಳನ್ನು ಕ್ಲಸ್ಟರ್‌ಗಳಾಗಿ ಗುರುತಿಸಿ, ಉತ್ತರ ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು. ಹುಬ್ಬಳ್ಳಿ ಐಐಐಟಿಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್‌ಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಬೆಳಗಾವಿಯಲ್ಲಿ ಐಟಿ ಪಾರ್ಕ್, ಸೆಮಿ ಕಂಡಕ್ಟರ್ ಪಾರ್ಕ್‌ಗಳನ್ನು ನಿರ್ಮಿಸಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಾಗುತ್ತಿದೆ.
ಬಿಜೆಪಿಯ ಅಭಯ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಐಟಿ ಪ್ಲಗ್ ಅಂಡ್ ಪ್ಲೇ ಮೂಲಸೌಕರ್ಯ ಸ್ಥಾಪನೆ, ಸ್ಟಾರ್ಟಪ್‌ಗಳು ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಂತಹ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ ಎಂದರು. ಬೆಳಗಾವಿಯ ತಿಲಕವಾಡಿಯ ಕಲಾಮಂದಿರ ಕಟ್ಟಡದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಹಯೋಗದೊಂದಿಗೆ 'ಜಾಗತಿಕ ತಂತ್ರಜ್ಞಾನ ಕೇಂದ್ರ' ಸ್ಥಾಪಿಸಲು ಆ ಕಟ್ಟಡವನ್ನು ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿದೆ.