ಒಳ ಮೀಸಲು ಗೊಂದಲ

Contributed byKENCHE GOWDA|Vijaya Karnataka

ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಒಳ ಮೀಸಲು ವಿಚಾರದಲ್ಲಿ ಕಳ್ಳಾಟ ನಡೆಸುತ್ತಿದೆ ಎಂದು ಆರೋಪಿಸಿದೆ. ಖಾಲಿ ಹುದ್ದೆಗಳ ಭರ್ತಿ ವಿಚಾರದಲ್ಲಿ ಸರಕಾರ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಈ ಬಗ್ಗೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಮೀಸಲಾತಿ ಹೆಚ್ಚಿಸಲಾಗಿತ್ತು ಎಂದು ತಿಳಿಸಿದ್ದಾರೆ.

bjp signals aggressive struggle over reservation confusion
ಬೆಂಗಳೂರು: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದ ನೆಪ ಹೇಳಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೆ ಕಳ್ಳಾಟ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಬಿಜೆಪಿ ದಲಿತ ಸಮುದಾಯದ ನಾಯಕರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಬಿ. ಶ್ರೀರಾಮುಲು, ಶಿವನಗೌಡ ನಾಯಕ್‌, ಎನ್‌. ಮಹೇಶ್‌, ಕೇಂದ್ರದ ಮಾಜಿ ಸಚಿವ ಎ.ನಾರಾಯಣ ಸ್ವಾಮಿ, ಮಾಜಿ ಸಂಸದ ಮುನಿಸ್ವಾಮಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, "ಮೀಸಲು ಮತ್ತು ಒಳ ಮೀಸಲು ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಯಾವುದೇ ಬದ್ಧತೆಯಿಲ್ಲ. ಈ ಧೋರಣೆ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ರಾಜ್ಯಾದ್ಯಂತ ಜನರಲ್ಲಿ ಆಕ್ರೋಶ ಮೂಡಿದೆ. ಇದನ್ನು ದೊಡ್ಡ ಆಂದೋಲನವನ್ನಾಗಿ ಪರಿವರ್ತಿಸುತ್ತೇವೆ" ಎಂದರು.
"ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ. 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸಲಾಗಿತ್ತು. ಈಗಿನ ಸರ್ಕಾರ ರಚಿಸಿದ ನ್ಯಾ.ನಾಗಮೋಹನ್‌ ದಾಸ್‌ ಸಮಿತಿ ಎಸ್ಸಿಗೆ ಶೇ.17 ಮೀಸಲಾತಿಗೆ ಶಿಫಾರಸು ಮಾಡಿತ್ತು. ಆಯೋಗವು 5 ಗುಂಪುಗಳಿಗೆ ಸಲಹೆ ನೀಡಿದ್ದರೂ, ಸರ್ಕಾರ ರಾಜಕೀಯ ಲಾಭಕ್ಕಾಗಿ ಮೂರು ಗುಂಪುಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಿ ಯಾರಿಗೂ ನ್ಯಾಯ ಸಿಗದಂತೆ ಮಾಡಿದೆ. ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಮೇಲೆ ಒತ್ತಡ ತಂದು ಅಂಕಿತ ಹಾಕಿಸಿಕೊಂಡ ಸರ್ಕಾರ ಈಗ ನ್ಯಾಯಾಲಯದತ್ತ ಬೊಟ್ಟು ಮಾಡುತ್ತಿದೆ. ಸುಳ್ಳು ಹೇಳುವುದರಲ್ಲಿ ನಿಪುಣರಾದ ಮುಖ್ಯಮಂತ್ರಿ ಈಗ ಸಿಕ್ಕಿಬಿದ್ದಿದ್ದಾರೆ" ಎಂದು ಅವರು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೊಟ್ಟಿಲು ತೂಗುವ ಜತೆಗೆ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದಾರೆ. ಹಳೆಯ ಮೀಸಲು ಪ್ರಕಾರವೇ ನೇಮಕ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಮುಂದಾಗುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಿದ್ದಾರೆ. 'ಅಹಿಂದ' ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಅದೇ ಸಮುದಾಯದ ತಾಳ್ಮೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯ" ಎಂದು ಎಚ್ಚರಿಕೆ ನೀಡಿದರು.