ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತಿಮ್ಮನಹಳ್ಳಿ ಬಳಿ ಗುರುವಾರ ಬೆಳಗ್ಗೆ ರಸ್ತೆಯಲ್ಲಿನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಚೇನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾಗ ರಸ್ತೆಯಲ್ಲಿದ್ದ ಹಳ್ಳ ಗುಂಡಿಗಳಿಂದಾಗಿ ಬಸ್ ನ ಸ್ಟೇರಿಂಗ್ ರಾಡ್ ಕಟ್ ಆಗಿದೆ. ಆಗ ದೊಡ್ಡತಿಮ್ಮನಹಳ್ಳಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ.
ಘಟನೆ ಸಂಬಂಧ ಕೆಎಸ್ ಆರ್ ಟಿಸಿ ಬಸ್ ಡಿಪೋ ಮ್ಯಾನೇಜರ್ ಕೇಶವಮೂರ್ತಿ ಮಾತನಾಡಿ, ಘಟನೆಯಲ್ಲಿಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಘಟನೆ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಚಿತ್ರ-12 ದೊಡ್ಡಬಳ್ಳಾಪುರ 1: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಬಸ್ .