ಸುದ್ದಿವಾಹಿನಿ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

Contributed by: girish.jr@timesofindia.com|Vijaya Karnataka•
Vijay Karnataka
* ಸ್ಟಿಂಗ್ ಆಪರೇಷನ್ : ಡಿಜಿಪಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಪತ್ರ

ವಿಕ ಸುದ್ದಿಲೋಕ ಬೆಂಗಳೂರು
ಕುಟುಕು ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್ ) ಹೆಸರಿನಲ್ಲಿಜನಪ್ರತಿನಿಧಿಗಳ ತೇಜೋವಧೆ ಮಾಡಿ ಗೌರವಕ್ಕೆ ಧಕ್ಕೆ ಬರುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಮತ್ತು ಸಂಸ್ಥೆಯ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಯು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ರಾಕೇಶ್ ಶೆಟ್ಟಿ ಮತ್ತು ಪವರ್ ಟಿವಿ ಸುದ್ದಿವಾಹಿನಿ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಸರಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಮಾಡಲು ಪ್ರಚೋದಿಸಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ರಾಕೇಶ್ ಶೆಟ್ಟಿ ಮತ್ತು ಪವರ್ ಟಿವಿ ಸುದ್ದಿವಾಹಿನಿಯ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸುರೇಶ್ ಬಾಬು ಪತ್ರದಲ್ಲಿಕೋರಿದ್ದರು. ಅವರ ಪತ್ರದಲ್ಲಿಪ್ರಸ್ತಾಪಿಸಿರುವ ಅಂಶಗಳ ಕುರಿತು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಂಡು, ಅದರ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಸೂಚಿಸಿದ್ದಾರೆ.