ಗ್ರಾಮ ಪಂಚಾಯಿತಿ ಮಟ್ಟದಲ್ಲಿಆಯೋಜಿಸಲಾಗುತ್ತಿರುವ ಪ್ರಜಾಸೇವೆ ಆಂದೋಲನ ಸಭೆ ಶನಿವಾರ ಕಡಿರುದ್ಯಾವರ ಗ್ರಾಮ ಪಂಚಾಯಿತಿಯ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿನಡೆಯಿತು.ಸಭೆಯನ್ನು ಉದ್ಘಾಟಿಸಿದ ತಹಸೀಲ್ದಾರ್ ಎಸ್ .ಎನ್ . ನರಗುಂದ ಮಾತನಾಡಿ, ಸಾರ್ವಜನಿಕರು ವೈಯಕ್ತಿಕ ಹಾಗೂ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಅವಕಾಶವಿದೆ. ಸಮಸ್ಯೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದಲ್ಲಿ, ಅದನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಕಚೇರಿಯಿಂದ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಇಂತಹ ಸಭೆಗಳ ಮೂಲಕ ಒಂದೇ ವೇದಿಕೆಯಲ್ಲಿಹಲವು ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬಹುದು. ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯ ಮೇಲೂ ನಿಗಾ ಇರಿಸಲಾಗುತ್ತದೆ. ಪ್ರತೀ ಬುಧವಾರ ಜಿಲ್ಲಾಧಿಕಾರಿಗಳು ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಹಾಗೂ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿ, ಈ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ದಯಾವತಿ ಎಂ. ಮಾತನಾಡಿ, ಸರಕಾರದ ಆಶಯದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ಸಲ್ಲಿಕೆಯಾದ ಅಹವಾಲುಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಪಿಡಿಒ ಅಧಿಕಾರಿ ರವಿ ಬನಪ್ಪನವರ್ ಸ್ವಾಗತಿಸಿದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರೂಪಿಸಿದರು.
ಪೊಟೋ/.....21ಎಂಜೆ
ಚಿತ್ರ ವಿವರ-
1.ಗ್ರಾಮದ ಸಮಸ್ಯೆಗಳ ಕುರಿತು ಸಾರ್ವಜನಿಕರು ತಹಸೀಲ್ದಾರ್ ಜತೆ ಚರ್ಚಿಸಿದರು.
2. ಸಾರ್ವಜನಿಕರು ಗ್ರಾಮದ ಸಮಸ್ಯೆಗಳ ಕುರಿತು ಸಂಬಂಧಪಟ್ಟಿ ಇಲಾಖೆಗಳಿಗೆ ಅಹವಾಲು ಸಲ್ಲಿಸಿದರು.