ರಾಗಿ ಬೆಳೆ ಉತ್ತಮ ಫಸಲು ನೀಡಿದ್ದು, ಇದೀಗ ಕಟಾವಿಗೆ ಬಂದಿದೆ. ಗ್ರಾಮೀಣ ಪ್ರದೇಶಗಳಲ್ಲಿಕೂಲಿ ಕಾರ್ಮಿಕರ ಕೊರತೆಯಿಂದ ರೈತರು ಖಾಸಗಿ ರಾಗಿ ಕಟಾವು ಯಂತ್ರಗಳ ಮೊರೆ ಹೋಗುತ್ತಿರುವ ಹಿನ್ನೆಲೆಯಲ್ಲಿ, ಯಂತ್ರಗಳಿಗೆ ಜಿಲ್ಲಾಡಳಿತದಿಂದ ಸೂಕ್ತ ದರ ನಿಗದಿಪಡಿಸಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಗ್ರಹಿಸಿದರು.ರಾಗಿ ಹೊಲದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲೀಕರು ರೈತರ ಅನಿವಾರ್ಯತೆಯನ್ನು ಬಂಡವಾಳವನ್ನಾಗಿಸಿಕೊಂಡು ಪ್ರತಿ ಎಕರೆಗೆ 7 ಸಾವಿರದಿಂದ 10 ಸಾವಿರದವರೆಗೆ ಮನಬಂದಂತೆ ದರ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಸಣ್ಣ ಹಾಗೂ ಬಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಕೃಷಿ ಇಲಾಖೆ ಗಂಭೀರವಾಗಿ ಪರಿಗಣಿಸಿ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.
ಕೃಷಿ ಇಲಾಖೆಯಿಂದ ಕೃಷಿ ಯಂತ್ರಧಾರೆ ಯೋಜನೆಯಡಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿಪ್ರತಿವರ್ಷ ನೀಡುತ್ತಿದ್ದ ನಾನಾ ಸೌಲಭ್ಯಗಳನ್ನು ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ದುಬಾರಿ ವೆಚ್ಚ ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಕೃಷಿ ಸಚಿವರ ಆದೇಶದಂತೆ ಯೋಜನೆ ಸ್ಥಗಿತಗೊಳಿಸಲಾಗಿದೆ ಎಂಬ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಗಿ ಕಟಾವು ಮಾಡಿದ ಬಳಿಕ ಒಕ್ಕಣೆ ಮಾಡಲು ಗ್ರಾಮಗಳಲ್ಲಿಕಣಗಳ ಹಾಗೂ ಎತ್ತುಗಳ ಕೊರತೆ ಎದುರಾಗಿದೆ. ಹೀಗಾಗಿ ಕೆಲ ರೈತರು ರಾಷ್ಟ್ರೀಯ, ರಾಜ್ಯ ಹಾಗೂ ಗ್ರಾಮೀಣ ರಸ್ತೆಗಳಲ್ಲಿರಾಗಿ ಒಕ್ಕಣೆ ಮಾಡಲು ಮುಂದಾಗುತ್ತಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುವುದರ ಜತೆಗೆ, ವಾಹನಗಳು ರಾಗಿ ತೆನೆಗಳ ಮೇಲೆ ಸಂಚರಿಸುವುದರಿಂದ ವಾಹನಗಳ ಆಯಿಲ್ , ಕಲ್ಲು, ಟಾರ್ ಮತ್ತಿತರ ವಸ್ತುಗಳು ರಾಗಿಯೊಂದಿಗೆ ಬೆರೆತು ಆಹಾರ ಧಾನ್ಯ ಕಲುಷಿತಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಕೃಷಿ ಇಲಾಖೆ ಹಾಗೂ ಜಿಲ್ಲಾಡಳಿತವು ಕರಪತ್ರಗಳ ಮೂಲಕ ರೈತರಿಗೆ ಜಾಗೃತಿ ಮೂಡಿಸಿ, ರಸ್ತೆಗಳಲ್ಲಿರಾಗಿ ಒಕ್ಕಣೆ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಅಲ್ಲಿನ ಜಿಲ್ಲಾಧಿಕಾರಿಗಳು ಖಾಸಗಿ ರಾಗಿ ಕಟಾವು ಯಂತ್ರಗಳಿಗೆ ಪ್ರತಿ ಎಕರೆಗೆ 2,700 ರೂ. ದರ ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಿ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಅದೇ ಮಾದರಿಯಲ್ಲಿಕೋಲಾರ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಖಾಸಗಿ ಯಂತ್ರೋಪಕರಣಗಳ ಮಾಲೀಕರ ಸಭೆ ಕರೆದು ರೈತರಿಗೆ ಹೊರೆಯಾಗದಂತೆ ದರ ನಿಗದಿಪಡಿಸಬೇಕು. ಹಾಗೆಯೇ ಟಾರ್ಪಲ್ ಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಚಂದ್ರಪ್ಪ, ಯಲ್ಲಪ್ಪ, ವೇಣು, ಕೇಶವ, ಗಿರೀಶ್ , ರಾಜು, ಸುಪ್ರೀಂ ಚಲ, ಫಾರುಕ್ ಪಾಷ, ಶೈಲಜ, ರತ್ನಮ್ಮ, ರಾಧ, ಸುಗುಣ, ಶೋಭ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.