ಗುರುಮಠಕಲ್ ದ ಕಾಕಲವಾರ ರಸ್ತೆಯಲ್ಲಿಕಾಳಸಂತೆಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 14 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿವಶಪಡಿಸಿಕೊಂಡರು.
ಗುರುಮಠಕಲ್ ನಲ್ಲಿ 14 ಕ್ವಿಂಟಾಲ್ ಅಕ್ಕಿ ವಶಪಡಿತರ ಅಕ್ರಮ ಸಾಗಣೆ | ವಾಹನದ ಮೇಲೆ ಅಧಿಕಾರಿಗಳ ದಾಳಿ
ವಿಕ ಸುದ್ದಿಲೋಕ ಗುರುಮಠಕಲ…
ಬಡ ಕುಟುಂಬಗಳ ಪಡಿತರ ಫಲಾನುಭವಿಗಳಿಗೆ ವಿತರಿಸಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿ ದಾಳಿ ನಡೆಸಿ, 14 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಹೊರವಲಯದ ಕಾಕಲವಾರದಿಂದ ಗುರುಮಠಕಲ್ ಕಡೆ ತೆರಳುವ ಮಾರ್ಗ ಮಧ್ಯೆ ಆರಾಧನಾ ಶಾಲೆಯ ಸಮೀಪ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ ವಾಹನ ಪರಿಶೀಲಿಸಿದ್ದಾರೆ. ಕೆಎ 32 ಎಬಿ 6267 ನೋಂದಣಿ ಸಂಖ್ಯೆಯ ವಾಹನದಲ್ಲಿ 14 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆಯಾಗಿದೆ. ವಶಪಡಿಸಿಕೊಂಡ ಅಕ್ಕಿಯ ಮೌಲ್ಯ ಸುಮಾರು 32,480 ಎಂದು ಅಂದಾಜಿಸಲಾಗಿದೆ.
ಪ್ರಕರಣ ದಾಖಲು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕ ಹಾಗೂ ಚಾಲಕನ ವಿರುದ್ಧ ನ.20ರಂದು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿಅಗತ್ಯ ವಸ್ತುಗಳ ಕಾಯಿದೆ-1955ರ ಕಲಂ 3 ಮತ್ತು 7ರ ಅಡಿಯಲ್ಲಿಪ್ರಕರಣ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಯಾದಗಿರಿ ಉಪನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.