ರೋಣ (ಗದಗ): ಲಿಂಗಾಯತ ಪಂಚಮಸಾಲಿ ಸಮಾಜದ ಮೇಲೆ ಸರಕಾರ ಎರಡು ವರ್ಷಗಳ ಹಿಂದೆ ನಡೆಸಿದ ದೌರ್ಜನ್ಯದ ಕರಾಳ ದಿನದ ನೋವಿನ ನೆನಪಿಗಾಗಿ ಬೆಳಗಾವಿ ಸುವರ್ಣಸೌಧದ ಹತ್ತಿರ ಡಿ.10 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿಸೋಮವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ‘‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲು ಕಲ್ಪಿಸುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದೆ. ಎರಡು ವರ್ಷಗಳ ಹಿಂದೆ ಬೆಳಗಾವಿಯಲ್ಲಿಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲಿಂಗಾಯತ ಪಂಚಮಸಾಲಿ ಸಮಾಜದ ಮೇಲೆ ದೌರ್ಜನ್ಯ ನಡೆಸಿದ ಕರಾಳ ದಿನದ ನೆನಪಿಗಾಗಿ ಉಪವಾಸ ಹಮ್ಮಿಕೊಳ್ಳಲಾಗಿದೆ’’ ಎಂದರು.‘‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡುವಂತೆ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯ ಮಾಡಲಾಗುವುದು’’ ಎಂದರು. ಸುದ್ದಿಗೋಷ್ಠಿಯಲ್ಲಿಪಂಚಮಸಾಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.