ಆಳ್ವಾಸ್ ನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಕಂಪೆನಿ ತನ್ನ ಸಿಎಸ್ ಆರ್ ನಿಧಿಯಿಂದ 6.28 ಲಕ್ಷ ಆರ್ಥಿಕ ನೆರವು ನೀಡಿದೆ.ಆಳ್ವಾಸ್ ನ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ತಂಡಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಂಡಿರುವ 628 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರದಂತೆ ಒಟ್ಟು 6,28,000 ನೆರವನ್ನು ನೀಡಲಾಗಿದ್ದು, ಆಳ್ವಾಸ್ ನಲ್ಲಿಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ನೆರವಿನ ಮೊತ್ತವನ್ನು ಹಸ್ತಾಂತರಿಸಲಾಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಸಮಾಜದಲ್ಲಿಸಂಪತ್ತು ಹೊಂದಿರುವವರು ತಮ್ಮ ಸಂಪತ್ತಿನ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ವಿನಿಯೋಗಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಕ್ಷಿತ್ ರೈ ಮಾತನಾಡಿ, ಜೀವನದಲ್ಲಿಯಶಸ್ಸು ಸಾಧಿಸಲು ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ. ಪ್ರತಿಯೊಬ್ಬರ ಜೀವನದಲ್ಲಿಯೂ ಯಶಸ್ಸಿನ ಅವಕಾಶಗಳು ಒಮ್ಮೆ ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿತಮ್ಮ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ಕಾರ್ಯಾಚರಣೆಗಳ ಮುಖ್ಯಸ್ಥ ಜೋಬಿನ್ ಜೋಸೆಫ್ , ಆಳ್ವಾಸ್ ನ ಉದ್ಯಮಶೀಲತೆ ಅಭಿವೃದ್ಧಿ ಘಟಕದ ಮುಖ್ಯಸ್ಥ ವೇಣು ರಾವ್ ದೇವಾ ಉಪಸ್ಥಿತರಿದ್ದರು.
ಕಲಾ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.